ಸಿಎಂ ಎಂ.ಕೆ ಸ್ಟಾಲಿನ್ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಗಳ ಸಭೆ: ಮೇಕೆದಾಟುನಲ್ಲಿ ಅಣೆಕಟ್ಟು ನಿರ್ಮಾಣಕ್ಕೆ ಅವಕಾಶ ನೀಡದಂತೆ ಕೇಂದ್ರಕ್ಕೆ ಒತ್ತಾಯ

 


ವಿಜಯ ಸಂಘರ್ಷ

ತಮಿಳುನಾಡು: ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅಧ್ಯಕ್ಷತೆಯಲ್ಲಿ ನಡೆದ ಶಾಸಕಾಂಗ ಪಕ್ಷಗಳ ಸಭೆಯಲ್ಲಿ ಮೇಕೆದಾಟುನಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಹೊಸ ಅಣೆಕಟ್ಟು ನಿರ್ಮಿಸುವ ಕರ್ನಾಟಕದ ಪ್ರಯತ್ನವನ್ನು ಖಂಡಿಸಿದ್ದು, ಇದಕ್ಕೆ ಅನುಮತಿ ನೀಡದಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿವೆ.

ರಾಜ್ಯದ ಜನರ ಒಕ್ಕೂಟದ ವಿರೋಧವನ್ನು ಕೇಂದ್ರ ಸರ್ಕಾರಕ್ಕೆ ತಿಳಿಸಲು ಸರ್ವಪಕ್ಷಗಳ ನಿಯೋಗ ಶೀಘ್ರದಲ್ಲೇ ದೆಹಲಿಗೆ ಭೇಟಿ ನೀಡಲಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಗಳು ಸೇರಿದಂತೆ ಎಲ್ಲಾ ಕಾನೂನು ಮತ್ತು ಇತರ ಕ್ರಮಗಳನ್ನು ಮುಂದುವರಿಸಲು ಸಭೆ ನಿರ್ಧರಿಸಿದೆ.

ಸಭೆಯಲ್ಲಿ ಮೇಕೆದಾಟು ಯೋಜನೆಯ ಕುರಿತು ನಿರ್ಣಯ ಕೈಗೊಳ್ಳಲಾಗಿದೆ. ಈ ಅಣೆಕಟ್ಟು ನಿರ್ಮಾಣದಿಂದ ತಮಿಳುನಾಡಿನ ರೈತರ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಸಂಬಂಧಪಟ್ಟ ಯೋಜನೆಗೆ ಕೇಂದ್ರ ಸಚಿವಾಲಯವು ಅನುಮೋದನೆ ನೀಡಬಾರದು ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.

ಮತ್ತೊಂದು ನಿರ್ಣಯದಲ್ಲಿ ತಮಿಳುನಾಡಿನ ಎಲ್ಲಾ ರಾಜಕೀಯ ಪಕ್ಷಗಳು ಮೇಕೆದಾಟುವಿನಲ್ಲಿ ಹೊಸ ಅಣೆಕಟ್ಟು ನಿರ್ಮಾಣವನ್ನು ತಡೆಗಟ್ಟುವಲ್ಲಿ ರಾಜ್ಯ ಸರ್ಕಾರಕ್ಕೆ ತಮ್ಮ ಸಂಪೂರ್ಣ ಸಹಕಾರ ಮತ್ತು ಬೆಂಬಲವನ್ನು ನೀಡುತ್ತವೆ ಎಂದು ಹೇಳಿದೆ.

ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ 
+91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು