ವಿಜಯ ಸಂಘರ್ಷ
ಶಿವಮೊಗ್ಗ : ಲೋಕಸಭಾ ಚುನಾವಣೆ ಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯಾಗಿ ಅಖಾಡಕ್ಕಿಳಿದಿದ್ದ ಮಧು ಬಂಗಾರಪ್ಪ ಸೋಲನ್ನನು ಭವಿಸಿದ ನಂತರದ ದಿನಗಳಲ್ಲಿ ಜೆಡಿಎಸ್‌ನಿಂದ ಅಂತರವನ್ನು ಕಾಯ್ದುಕೊಂಡಿದ್ದರು.
ಶೀಘ್ರದಲ್ಲಿಯೇ ಕಾಂಗ್ರೆಸ್ ಸೇರ್ಪಡೆ ಗೊಳ್ಳಲಿದ್ದಾರೆಂಬ ಮಾತು ಕೇಳಿ ಬರುತ್ತಿತ್ತು. ಹಲವು ಬಾರಿ ಕಾಂಗ್ರೆಸ್ ನಾಯಕರೊಂದಿಗೆ ಮಾತಕತೆ ನಡೆಸಿದ್ದ ಮಧು ಇದೀಗ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಳ್ಳುವುದು ಖಚಿತವಾಗಿದೆ.
ಜೆಡಿಎಸ್ ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಮಧು ಸತತ ಸೋಲಿನಿಂದ ಕಂಗೆಟ್ಟಿದ್ದರು. ಜೆಡಿಎಸ್ ಪಕ್ಷದಲ್ಲಿ ರಾಜಕೀಯ ಭವಿಷ್ಯವಿಲ್ಲ ಎಂದು ಅರಿತಿದ್ದ ಮಧು ಕೈ ಹಿಡಿಯಲು ಎಲ್ಲಾ ರೀತಿಯ ತಯಾರಿ ನಡೆಸಿದ್ದರು. ಆದರೆ, ಕಾಲ ಕೂಡಿ ಬಂದಿರಲಿಲ್ಲ. ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗುತ್ತಿದ್ದಂತೆಯೇ ಜಿಲ್ಲೆಯಿಂದ ಮಧು ಬಂಗಾರಪ್ಪ, ಆರ್.ಎಂ. ಮಂಜುನಾಥ ಗೌಡ, ಶಾರದಾ ಪೂರ್ಯನಾಯ್ಕ ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಾರೆಂಬ ಸುದ್ಧಿ ವ್ಯಾಪಕವಾಗಿ ಹಬ್ಬಿತ್ತು. ಈಗಾಗಲೇ ಆರ್.ಎಂ. ಮಂಜುನಾಥಗೌಡರು ಕಾಂಗ್ರೆಸ್ ಸೇರ್ಪಡೆಗೊಂಡಿದ್ದು, ಮಾಜಿ ಶಾಸಕ ಮಧು ಬಂಗಾರಪ್ಪ ಜೆಡಿಎಸ್ ತೊರೆದು ಕೈ ಹಿಡಿಯಲು ಸನ್ನದ್ಧರಾಗಿದ್ದಾರೆ.
ಮಾ. 30 ರಂದು ಮಧು ಬಂಗಾರಪ್ಪ ನವರೊಂದಿಗೆ ಅವರ ಬೆಂಬಲಿಗರು, ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜಿವಾಲ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಉಪಸ್ಥಿತಿಯಲ್ಲಿ ಹುಬ್ಬಳ್ಳಿಯಲ್ಲಿ ಕೈ ಹಿಡಿಯಲು ಎಲ್ಲಾ ಸಿದ್ಧತೆಗಳು ನಡೆದಿವೆ.
ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795