ವಿಜಯ ಸಂಘರ್ಷ
ಭದ್ರಾವತಿ: ಕ್ಷೇತ್ರಾದ್ಯಂತ ಅಭಿವೃದ್ಧಿ ಕಾರ್ಯಗಳಿಗೆ ಕೋಟ್ಯಂತರ ಹಣ ಮಂಜೂರು ಮಾಡಿದ್ದರು ಅಧಿಕಾರಿಗಳ ಬೇಜವಾಬ್ದಾರಿ ತನದಿಂದ ಎಲ್ಲಾ ಕಾರ್ಯಗಳು ಕುಂಠಿತ ಗೊಂಡಿವೆ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿದರು.
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿಂದು ಹಮ್ಮಿಕೊಳ್ಳಲಾಗಿದ್ದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ(ಕೆಡಿಪಿ)ಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಧಿಕಾರಿಗಳು ಜವಾಬ್ದಾರಿಯುತ ವಾಗಿ ಕರ್ತವ್ಯ ನಿಭಾಯಿಸಬೇಕು. ಜನರ ಸಂಕಷ್ಟಗಳಿಗೆ ತಕ್ಷಣ ಸ್ಪಂದಿಸಬೇಕು.ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಬಾಕಿ ಉಕಿದಿದ್ದು, ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆದಿರುವ ಹಾಗು ಬಾಕಿ ಇರುವ ಕಾಮಗಾರಿಗಳ ಕುರಿತು ಚರ್ಚಿಸಲು ಸಭೆ ಕರೆಯಲಾಗಿದೆ. ಆದರೆ ಸಭೆಗೆ ಇಲಾಖೆಗಳ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳದಿರುವುದು ವಿಪರ್ಯಾಸದ ಸಂಗತಿಯಾಗಿದ್ದು, ಸಭೆ ಯಾರಿಗಾಗಿ ನಡೆಸಬೇಕಾಗಿದೆ ಎಂಬ ಪ್ರಶ್ನೆ ಎದುರಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಗರ ಹಾಗೂ ಗ್ರಾಮಾಂತರ ರಸ್ತೆಗಳು ಹಾಳಾಗಿದ್ದು, ತುರ್ತು ಕಾಮಗಾರಿ ಗಳಿಗಾಗಿ ಸರ್ಕಾರಿಂದ 80 ಲಕ್ಷ ರೂ ಅನುದಾನ ಬಿಡುಗಡೆ ಯಾಗಿದೆ. ಲೋಕೋಪಯೋಗಿ ಹಾಗು ನೀರಾವರಿ ಇಲಾಖೆಗಳಿಗೆ ಕೋಟ್ಯಾಂತರ ರೂ ಅನುದಾನ ಸರ್ಕಾರದಿಂದ ಬಿಡುಗಡೆ ಮಾಡಿಸಿ ಕೊಡಲಾಗಿದೆ. ಆದರೆ ಬಹಳಷ್ಟು ಕಾಮಗಾರಿಗಳು ಬಾಕಿ ಉಳಿದಿದ್ದು, ಅಲ್ಲದೆ ಕಾಮಗಾರಿಗಳನ್ನು ವಿಳಂಬವಾಗಿ ಕೈಗೆತ್ತಿಕೊಳ್ಳಲಾಗುತ್ತಿದೆ. ಇದಕ್ಕೆ ಕಾರಣಗಳು ತಿಳಿದು ಬರುತ್ತಿಲ್ಲ.
ಆಹಾರ ಇಲಾಖೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಬಡಬಗ್ಗರ ಬಿಪಿಎಲ್ ಪಡಿತರ ಚೀಟಿಗಳನ್ನು ಕಾರಣವಿಲ್ಲದೆ ರದ್ದು ಮಾಡಲಾಗಿದೆ. ಬಡವರು ಏನು ತಿನ್ನಬೇಕು. ಉಳ್ಳವರ ಪಾಲಿಗೆ ಬಿಪಿಎಲ್ ನೀಡಿ ಅರ್ಹ ಫಲಾನುಭವಿಗಳಿಗೆ ಕಡಿತ ಗೊಳಿಸಿ ರುವುದು ಯಾವನ್ಯಾಯ ಎಂದು ಪ್ರಶ್ನಿಸಿದ ಅವರು, ಮುಂದಿನ ಸಭೆಗೆ ಜಿಲ್ಲಾಧಿಕಾರಿಗಳನ್ನು ಕರೆದು ಸಭೆ ನಡೆಸಬೇಕಿದೆ. ವಿನಾಕಾರಣ ಪಡಿತರ ಚೀಟಿ ರದ್ದು ಮಾಡಿರುವ ಅಧಿಕಾರಿಗಳನ್ನು ಅಮಾನತ್ತು ಮಾಡುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ವಿರೂಪಾಕ್ಷಪ್ಪ ಕಂದಾಯ ಇಲಾಖೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ಯನ್ನು ಖಂಡಿಸಿದರು. ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಗಳ ಪ್ರಗತಿ ಮಾಹಿತಿಯನ್ನು ಮಂಡಿಸಿದರು.
ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ಗ್ರಾಮಾಂತರ ವೃತ್ತ ನಿರೀಕ್ಷಕ ಚೈತನ್ಯ ಉಪಸ್ಥಿತರಿದ್ದರು. ಕೆಡಿಪಿ ಸಮಿತಿ ಸದಸ್ಯರಾದ ಸುನೀತಾ ಮೋಹನ್, ನಾಗರಾಜ್‌ರಾವ್ ಅಂಬೋರೆ, ಗಜೇಂದ್ರಜೈನ್,ಚಂದ್ರಪ್ಪ, ನಗರಸಭೆ ಸದಸ್ಯ ಬಿ.ಟಿ ನಾಗರಾಜ್, ಆರ್. ಮೋಹನ್ ಕುಮಾರ್, ನ್ಯಾಯವಾದಿ ಟಿ.ಚಂದ್ರೇಗೌಡ ಸಭೆಯಲ್ಲಿ ಪಾಲ್ಗೊಂಡಿದ್ದ ಅಧಿಕಾರಿಗಳ ಕಾರ್ಯವೈಖರಿ ವಿರುದ್ದ ಹರಿಹಾಯ್ದರು.
ವಿವಿಧ ಇಲಾಖೆ ಅಧಿಕಾರಿಗಳಾದ ಎಸ್.ಎಸ್.ವೈ ಶಿರಸ್ತೇದಾರ್ ರಾಧಾಕೃಷ್ಣಭಟ್, ಸಹಾಯಕ ಕೃಷಿ ನಿರ್ದೇಶಕ ಶಶಿಧರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗೋಪಿನಾಥ್, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ಕೆಎಸ್‌ಆರ್‌ಟಿಸಿ ಘಟಕ ವ್ಯವಸ್ಥಾಪಕಿ ಅಂಬಿಕಾ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಕಾಂತರಾಜ್, ನಗರಸಭೆ ಸಹಾಯಕ ಇಂಜಿನಿಯರ್ ಶ್ರೀರಂಗರಾಜ ಪುರೆ ಇನ್ನಿತರರು ಪಾಲ್ಗೊಂಡಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಕರೆ ಮಾಡಿ +91 9743225795