ವಿಜಯ ಸಂಘರ್ಷ
ಭದ್ರಾವತಿ: ನಗರದ ಬಿ.ಎಚ್ ರಸ್ತೆ ಅಂಡರ್ ಬ್ರಿಡ್ಜ್ ಬಳಿಯ ಕುಬ್ಜವಾಗಿರುವ ಭಾರತರತ್ನ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಹಳೇಯ ಪ್ರತಿಮೆಯನ್ನು ಬದಲಿಸಿ ಹೊಸ ಪ್ರತಿಮೆ ಪ್ರತಿಷ್ಠಾಪಿಸಬೇಕೆಂದು ಆಗ್ರಹಿಸಿ ಇಂದು ಡಿಎಸ್ಎಸ್ ವತಿಯಿಂದ ನಗರಸಭೆ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ನೇತೃತ್ವ ವಹಿಸಿದ್ದ ಡಿಎಸ್‌ಎಸ್ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ ಮಾತನಾಡಿ, 2007ರಲ್ಲಿ ಅಂದಿನ ಉಪಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸರ್ಕಾರದ ನಿಯಾಮಾನುಸಾರ ಪ್ರತಿಷ್ಠಾಪನೆ ನೆರವೇರಿಸಿದ್ದರು. ಆದರೆ ಈ ಪ್ರತಿಮೆ ಕೇವಲ 6 ಅಡಿ ಎತ್ತರವಿದ್ದು, ಕುಬ್ಜವಾಗಿದೆ. ಈ ಹಿನ್ನಲೆಯಲ್ಲಿ ಆರಂಭದಿಂದಲೂ ಹಲವಾರು ಬಾರಿ ಈ ಪ್ರತಿಮೆ ಬದಲಿಸಿ ಹೊಸದಾಗಿ 12 ಅಡಿ ಎತ್ತರದ ಆಕರ್ಷಕವಾದ ಪ್ರತಿಮೆಯನ್ನು ಪ್ರತಿಷ್ಠಾಪಿಸುವಂತೆ ಒತ್ತಾಯಿಸಿ ಕೊಂಡು ಬರಲಾಗುತ್ತಿದೆ. ಆದರೆ ಪ್ರತಿಮೆ ಪ್ರತಿಷ್ಠಾಪನೆ ಮಾಡು ವಲ್ಲಿ ನಿರ್ಲಕ್ಷ್ಯತನ ಧೋರಣೆ ಅನುಸ ರಿಸುವ ಮೂಲಕ ಅಂಬೇಡ್ಕರ್ ಅವರಿಗೆ ಅವಮಾನ ಮಾಡುವ ಕೆಲಸ ಮಾಡಲಾಗುತ್ತಿದೆ. ತಕ್ಷಣ ಪ್ರತಿಮೆ ಪ್ರತಿಷ್ಠಾಪನೆಗೆ ಮುಂದಾಗುವಂತೆ ಆಗ್ರಹಿಸಿದರು.
ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ಸರ್ಕಾರದಿಂದ ಸಮರ್ಪಕವಾಗಿ ಯಾವುದೇ ಅನುದಾನ ಬಿಡುಗಡೆಯಾಗುತ್ತಿಲ್ಲ. ಆದರೂ ಸಹ ಯಾವುದಾದರೂ ಅನುದಾನದಲ್ಲಿ ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಮಾಡಲಾಗುವುದು. ಪ್ರತಿಮೆ ಪ್ರತಿಷ್ಠಾಪನೆ ಮಾಡಬೇಕೆಂಬ ನಿಮ್ಮ ಹೋರಾಟಕ್ಕೆ ನನ್ನದು ಸಹ ಬೆಂಬಲವಿದೆ. ಈ ಹಿನ್ನಲೆಯಲ್ಲಿ ನಾವೆಲ್ಲರೂ ಸೇರಿ ಪ್ರತಿಮೆ ಪ್ರತಿಷ್ಠಾಪನೆ ಮಾಡುವ ಮೂಲಕ ಅಂಬೇಡ್ಕರ್ ಅವರಿಗೆ ಗೌರವ ತಂದು ಕೊಡುವ ಕೆಲಸ ಮಾಡೋಣ ಎಂದರು.
ನಗರಸಭೆ ಅಧ್ಯಕ್ಷೆ ಗೀತಾ ರಾಜ್ ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಪೌರಾಯುಕ್ತ ಕೆ. ಪರಮೇಶ್, ಕಂದಾಯಾಧಿಕಾರಿ ರಾಜ್‌ಕುಮಾರ್, ಸದಸ್ಯರಾದ ಬಿ.ಕೆ ಮೋಹನ್, ಉದಯಕುಮಾರ್, ಮಾಜಿ ಸದಸ್ಯ ಬಾಲಕೃಷ್ಣ, ಡಿಎಸ್‌ಎಸ್ ತಾಲೂಕು ಸಂಚಾಲಕ ರಂಗನಾಥ್, ದಲಿತ ಮುಖಂಡರಾದ ಈಶ್ವರಪ್ಪ, ಕಾಣಿಕ್‌ರಾಜ್, ಜಿಂಕ್‌ಲೈನ್ ಮಣಿ, ವಿ. ವಿನೋದ್, ದಾಸ್, ಎಸ್.ಎಸ್ ಭೈರಪ್ಪ ಮತ್ತಿತರದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಕರೆ ಮಾಡಿ +91 9743225795