ವಿಜಯಸಂಘರ್ಷ /ಭದ್ರಾವತಿ
ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಉಂಟಾಗುತ್ತಿರುವ ಸಮಸ್ಯೆಗಳನ್ನು ತಪ್ಪಿಸಿ ಕೆಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಲ್ಲಿಸಲಾಗಿದ್ದ ಮನವಿಗೆ ಬೆಂಗಳೂರಿನ ಕೆಎಸ್‌ಆರ್‌ಟಿಸಿ ಕೇಂದ್ರೀಯ ವಿಭಾಗದ ಆಯುಕ್ತ ಅನ್ಬುಕುಮಾರ್ ಅವರು ಪೂರಕವಾಗಿ ಸ್ಪಂದಿಸಿದ್ದಾರೆಂದು ಕ್ಷೇತ್ರ ಅಭಿವೃದ್ಧಿ ವೇದಿಕೆ ಅಧ್ಯಕ್ಷ ಜಿ.ಟಿ ಬಸವರಾಜ್ ಹಾಗು ಕಾರ್ಯದರ್ಶಿ ಡಿ. ನರಸಿಂಹಮೂರ್ತಿ ತಿಳಿಸಿದ್ದಾರೆ.
ವೇದಿಕೆ ವತಿಯಿಂದ ಇತ್ತೀಚೆಗೆ ಸುಮಾರು 11 ಬೇಡಿಕೆಗಳನ್ನು ಈಡೇರಿಸುವಂತೆ ಕೆಎಸ್‌ಆರ್‌ಟಿಸಿ ಕೇಂದ್ರೀಯ ವಿಭಾಗದ ಆಯುಕ್ತರಿಗೆ ಮನವಿ ಸಲ್ಲಿಸಲಾಗಿತ್ತು. ಮನವಿಗೆ ಸ್ಪಂದಿಸಿರುವ ಆಯುಕ್ತರು, ನಗರ ವ್ಯಾಪ್ತಿಯಲ್ಲಿ ಸಂಚರಿಸಲು 2 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ, ಕೇಂದ್ರಿಯ ವಿಭಾಗದಿಂದ ಅನುಮತಿ ಪಡೆದು ಭದ್ರಾವತಿ ಡಿಪೋದಿಂದ ಮಣಿಪಾಲ್, ಉಡುಪಿಗೆ ಜುಲೈ ತಿಂಗಳಿನಲ್ಲಿ ಬಸ್ ಸಂಚಾರ ವ್ಯವಸ್ಥೆ, ನಿಲ್ದಾಣದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಮಳೆಗಾಲದಲ್ಲಿ ನೀರು ಸೋರಿಕೆಯಾಗದಂತೆ ಕಟ್ಟಡದ ದುರಸ್ತಿ ಕಾರ್ಯ ಕೈಗೊಳ್ಳುವುದು, ವಿಕಲಚೇತನರಿಗೆ ಹಾಗು ಹಿರಿಯ ನಾಗರೀಕರಿಗೆ ಅನುಕೂಲವಾಗುವಂತೆ ಶೌಚಾಲಯಗಳಲ್ಲಿ ವೆಸ್ಟ್ರನ್ ಕಮೋಡ್‌ಗಳನ್ನು ಅಳವಡಿಸುವುದು, ವಿದ್ಯುತ್ ದೀಪಗಳ ದುರಸ್ತಿ ಹಾಗು ಮಹಿಳೆಯರಿಗೆ ಪ್ರತ್ಯೇಕ ವಿಶ್ರಾಂತಿ ಗೃಹ ನಿರ್ಮಾಣ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ.
ಸಾರ್ವಜನಿಕರ ಹಿತದೃಷ್ಟಿಯಿಂದ ವೇದಿಕೆ ವತಿಯಿಂದ ಸಲ್ಲಿಸಲಾಗಿದ್ದ ಮನವಿಗೆ ಪೂರಕವಾಗಿ ಸ್ಪಂದಿಸಿರುವ ಕೆಎಸ್‌ಆರ್‌ಟಿಸಿ ಕೇಂದ್ರೀಯ ವಿಭಾಗದ ಆಯುಕ್ತ ಅನ್ಬುಕುಮಾರ್ ಅವರಿಗೆ ಜಿ.ಟಿ ಬಸವರಾಜ್ ಹಾಗು ಡಿ. ನರಸಿಂಹಮೂರ್ತಿ ಕೃತಜ್ಞತೆ ಸಲ್ಲಿಸಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ
+91 9743225795