ಮುಂದಿನ ವರ್ಷ ಸಮುದಾಯ ಭವನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ

ವಿಜಯ ಸಂಘರ್ಷ
ಭದ್ರಾವತಿ: ಮುಂದಿನ ವರ್ಷ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ವಾಲ್ಮೀಕಿ ಸಮುದಾಯ ಭವನದಲ್ಲಿ ಆಚರಿಸಲು ಪ್ರಯತ್ನಿಸುವುದಾಗಿ ನಗರಸಭೆ ಸದಸ್ಯ ಬಿ.ಕೆ.ಮೋಹನ್ ಭರವಸೆ ನೀಡಿದರು.

ಶನಿವಾರ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟವರ್ಗಗಳ ಕಲ್ಯಾಣ ಇಲಾಖೆ, ನಗರಸಭೆ, ಹಾಗು ಮಹರ್ಷಿ ವಾಲ್ಮೀಕಿ ನಾಯಕ ಸಂಘ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ನಗರದ ವೀರಶೈವ ಸಭಾ ಭವನದಲ್ಲಿ ಆಯೋಜಿಸಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.

ವರುಷಕೊಮ್ಮೆ ನಡೆಯುವ ಸಮಾಜದ ಕಾರ್ಯಕ್ರಮಕ್ಕೆ ಸಮಾಜ ಬಾಂಧವ ರೆಲ್ಲರೂ ಭಾಗವಹಿಸುವುದು ಮುಖ್ಯ. ಕಾರ್ಯಕ್ರಮದ ಯಶಸ್ವಿಯಲ್ಲಿ ಅಧಿಕಾರಿಗಳ ಪಾತ್ರವೂ ಮುಖ್ಯ ವಾಗಿದ್ದು, ಅಧಿಕಾರಿಗಳ ಪ್ರಯತ್ನ ಶ್ಲಾಘನೀಯ ಎಂದರು.

ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ಹಾಗೂ ನಗರಸಭಾ ಸದಸ್ಯ ಬಸವರಾಜ್ ಬಿ ಆನೇಕೊಪ್ಪ ಮಾತನಾಡಿ ನಗರದಲ್ಲಿ ಪ್ರಗತಿ ಹಂತದಲ್ಲಿರುವ ವಾಲ್ಮೀಕಿ ಸಮುದಾಯ ಭವನ ಮತ್ತು ಅಂಬೇಡ್ಕರ್ ಭವನಗಳೆರಡು ಪೂರ್ಣಗೊಂಡರೆ ಭದ್ರಾವತಿಗೆ ಮೆರಗು ದೊರೆಯುತ್ತದೆ.

ವಾಲ್ಮೀಕಿ ಸಮಾಜದ ಅಭಿವೃದ್ಧಿಗಾಗಿ ಭದ್ರಾವತಿ ನಗರದಲ್ಲಿ ವಾಲ್ಮೀಕಿ ಉದ್ಯಾನವನ ಹಾಗು ವಾಲ್ಮೀಕಿ ಪುತ್ಥಳಿ ಸ್ಥಾಪಿಸಬೇಕು. ಜೊತೆಗೆ ಪ್ರಗತಿ ಹಂತದಲ್ಲಿರುವ ವಾಲ್ಮೀಕಿ ಸಮುದಾಯ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಕೋರಿದರು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಶೃತಿ ವಸಂತಕುಮಾರ್, ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ ಸದಸ್ಯರಾದ ಲತಾ ಚಂದ್ರಶೇಖರ್, ಕಾಂತರಾಜ್, ತಹಶೀಲ್ದಾರ್ ಕೆ.ಆರ್.ನಾಗರಾಜ್, ಪೌರಾಯುಕ್ತ ಮನುಕುಮಾರ್, ಬಿಇಒ ಎ.ಕೆ.ನಾಗೇಂದ್ರಪ್ಪ, ದಸಂಸ ಮುಖಂಡರಾದ ಚಿನ್ನಯ್ಯ,ರಂಗನಾಥ್, ಈಶ್ವರಪ್ಪ ಹಾಗೂ ಸಮಾಜದ ಮುಖಂಡರಿದ್ದರು. 

ಸಿದ್ಧಾರ್ಥ ಅಂಧರ ಕೇಂದ್ರದ ಗಾಯಕರು ಪ್ರಾರ್ಥಿಸಿ, ನಾಡಗೀತೆ ಹಾಡಿದರು. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಗೋಪಾಲಪ್ಪ ಸ್ವಾಗತಿಸಿದರು. ಸಮಾಜ ಕಲ್ಯಾಣ ಇಲಾಖೆಯ ನಿಲಯ ಮೇಲ್ವಿಚಾರಕ ಎಸ್.ವಿ.ಶಶಿಕುಮಾರ್ ಉಪನ್ಯಾಸ ನೀಡಿದರು. ಇದೇ ಸಂದರ್ಭದಲ್ಲಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು