ವಿಜಯ ಸಂಘರ್ಷ
ಭದ್ರಾವತಿ : ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪನವರ 90ನೇ ಜನ್ಮದಿನಾಚರಣೆ ಪ್ರಯುಕ್ತ ಅರ್ಧಕ್ಕೆ ಸ್ಥಗಿತಗೊಂಡಿರುವ ಡಾ.ಬಿ.ಆರ್ ಅಂಬೇಡ್ಕರ್ ಭವನ ಕಾಮಗಾರಿ ಅವ್ಯವಸ್ಥೆ ಹಾಗು ಕ್ಷೇತ್ರದಲ್ಲಿ ಮಿತಿಮೀರಿರುವ ಭ್ರಷ್ಟಾಚಾರ ಮತ್ತು ಕಳಪೆ ಕಾಮಗಾರಿ ಖಂಡಿಸಿ ಹಾಗು ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನಿರ್ಲಕ್ಷ್ಯತನದ ವಿರುದ್ಧ ಅ.31 ರಂದು ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಅಂಬೇಡ್ಕರ್ ಭವನದ ಮುಂಭಾಗ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಹೇಳಿದರು.
ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 2017 ರಲ್ಲಿ ಹಳೇನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಿಂಭಾಗದ ಖಾಲಿ ಜಾಗದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಭವನ ಕಾಮಗಾರಿ ಆರಂಭಗೊಂಡಿದ್ದು, ಅರ್ಧಕ್ಕೆ ಸ್ಥಗಿತಗೊಂಡಿದೆ. ಈ ಸಂಬಂಧ ಹಲವಾರು ಬಾರಿ ಹೋರಾಟ ನಡೆಸಿ ಮನವಿ ಸಲ್ಲಿಸ ಲಾಗಿದೆ. ಆದರೆ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
ಕ್ಷೇತ್ರದ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು, ಅಲ್ಲದೆ ಹಲವು ಕಾಮಗಾರಿಗಳು ಕಳಪೆ ಗುಣಮಟ್ಟದಿಂದ ಕೂಡಿವೆ. ಈ ಸಂಬಂಧ ಯಾರು ಸಹ ಗಮನ ಹರಿಸುತ್ತಿಲ್ಲ. ಜನಸಾಮಾನ್ಯರ ಅಹವಾಲು ಗಳಿಗೆ ಜನಪ್ರತಿನಿಧಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರು ಭದ್ರಾವತಿ ತಾಲೂಕು ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಭೇಟಿ ನೀಡಿ ಜನಸಾಮಾನ್ಯರ ಸಂಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ. ಅಲ್ಲದೆ ಕೆಡಿಪಿ ಸಭೆಯನ್ನು ನಡೆಸಿದ್ದಾರೆ. ಆದರೆ ಇಲ್ಲಿಗೆ ಮಾತ್ರ ಇದುವರೆಗೂ ಭೇಟಿ ನೀಡಿಲ್ಲ. ಕೆಡಿಪಿ ಸಭೆ ಸಹ ನಡೆಸಿಲ್ಲ. ಸಚಿವರ ಮಲತಾಯಿ ಧೋರಣೆ ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನೂ ಹಲವಾರು ಸಮಸ್ಯೆಗಳಿದ್ದು, ಈ ಹಿನ್ನಲೆಯಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸ ಬೇಕೆಂದು ಕೋರಿದರು.
ಪತ್ರಿಕಾಗೋಷ್ಠಿಯಲ್ಲಿ ಸಮಿತಿ ಕಾರ್ಯಾಧ್ಯಕ್ಷ ಐ.ಎಲ್ ಅರುಣ್‌ಕುಮಾರ್, ಪ್ರಧಾನ ಕಾರ್ಯದರ್ಶಿ ಅಕ್ರಂ ಖಾನ್, ಉಪಾಧ್ಯಕ್ಷರಾದ ಬ್ರಹ್ಮಲಿಂಗಯ್ಯ, ರಂಗಪ್ಪ, ಶೌಕತ್, ಪ್ರಧಾನ ಸಂಚಾಲಕರಾದ ಶ್ರೀನಿವಾಸ್, ಬಸವರಾಜ್, ಸಂಚಾಲಕರಾದ ಅಜಿತ್, ಅಜಯ್ ಮತ್ತು ಶಿವಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.