ವಿಜಯ ಸಂಘರ್ಷ
ಶಿವಮೊಗ್ಗ: ಎಲ್ಲ ಹಂತಗಳಲ್ಲಿ ಮಲೇರಿಯಾ ನಿವಾರಣೆ ಚಟುವಟಿಕೆ ಗಳನ್ನು ಪರಿಣಾಮ ಕಾರಿಯಾಗಿ ಅನುಷ್ಠಾನಗೊಳಿಸುವುದು ನಮ್ಮೆಲ್ಲರ ಜವಾಬಾರಿಯಾಗಿದೆ. ಕರ್ನಾಟಕ ರಾಜ್ಯವು 2025 ರೊಳಗೆ ಮಲೇರಿಯಾ ಮುಕ್ತಗೊಳಿಸುವ ಗುರಿ ಸಾಧಿಸ ಬೇಕಾಗಿದೆ ಎಂದು ಜಿಲ್ಲಾ ರೋಗ ವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಗುಡದಪ್ಪ ಕಸಬಿ ಹೇಳಿದರು.
ರೋಟರಿ ಸಭಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಮಲೇರಿಯಾ ರೋಗವು ಬರಿಗಣ್ಣಿಗೆ ಕಾಣಿಸದ ಸೂಕ್ಷ್ಮ ಪ್ಲಾಸ್ಮೋಡಿಯಂ ಎಂಬ ಪರಾವಲಂಬಿ ಜೀವಿಯಿಂದ ಬರುತ್ತದೆ. ರೋಗ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ ಎಂದು ತಿಳಿಸಿದರು.
ವರ್ಷದ ಎಲ್ಲ ಕಾಲದಲ್ಲಿ ರೋಗ ಕಂಡು ಬಂದರೂ ಜೂನ್ ನಿಂದ ಅಕ್ಟೋಬರ್ ವರೆಗೆ ಹೆಚ್ಚಾಗಿ ಕಂಡು ಬರುತ್ತದೆ. ಎಲ್ಲೆಂದರಲ್ಲಿ ನೀರು ನಿಂತು ಸೊಳ್ಳೆಗಳು ಹೆಚ್ಚಾಗಿ ಕೀಟಜನ್ಯ ರೋಗಗಳು ಹರಡುವ ಸಂಭವ ಇರುತ್ತದೆ. ಸಾಂಕ್ರಾಮಿಕ ರೋಗಗಳ ಹರಡುವಿಕೆ, ನಿಯಂತ್ರಣ ಮತ್ತು ಚಿಕಿತ್ಸೆ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಯೊಂದಿಗೆ ಸಾರ್ವಜನಿಕರ ಸಹಕಾರದ ಬಗ್ಗೆ ತಿಳವಳಿಕೆ ನೀಡುವುದು ಅತಿ ಮುಖ್ಯವಾಗಿದೆ ಎಂದರು.
ರೋಟರಿ ಪೂರ್ವ ಉಪಾಧ್ಯಕ್ಷ ಜಿ.ವಿಜಯಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಾರ್ವಜನಿಕರು ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಆರೋಗ್ಯ ಇಲಾಖೆ ಮಾಹಿತಿಯನ್ನು ಅನುಸರಿಸಬೇಕು. ಸದೃಢ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ರೋಟರಿ ಸದಸ್ಯರಿಂದ ಪ್ರಶ್ನೋತ್ತರ ನಡೆಯಿತು. ಬಿಸಿಲಿನಿಂದ ಆರೋಗ್ಯ ರಕ್ಷಿಸಿಕೊಳ್ಳುವ ಬಗ್ಗೆ ಸಲಹೆ ನೀಡಲಾಯಿತು. ರೋಟರಿ ಪೂರ್ವ ಕಾರ್ಯದರ್ಶಿ ಕಿಶೋರಕುಮಾರ್, ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರಿದ್ದರು.