ಡಿಸಿಎಂ ಡಿ.ಕೆ.ಶಿವಕುಮಾರ್‌ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್- ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ವಿಜಯ ಸಂಘರ್ಷ 
ಕೆ.ಆರ್.ಪೇಟೆ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣವನ್ನು ಸಿಬಿಐಗೆ ವಹಿಸುವ ಮೂಲಕ ಸೂಕ್ತ ತನಿಖೆ ನಡೆಸಬೇಕು. ಜತೆಗೆ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಕುಟುಂಬಕ್ಕೆ ಚ್ಯುತಿ ತರಲು ಮುಂದಾಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌,ಮಾಜಿ ಸಂಸದ ಎಲ್‌.ಆರ್‌.ಶಿವರಾಮೇಗೌಡ ವಿರುದ್ಧ ಸೂಕ್ತ ಕ್ರಮಕ್ಕೆ ಗ್ರಾ.ಪಂ ಮಾಜಿ ಅಧ್ಯಕ್ಷ ಮೋಹನ್ ಆಗ್ರಹಿಸಿದರು.

ತಾಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀರುವಳ್ಳಿ ಗ್ರಾಮದ ಶ್ರೀ ಚಂದಗೋಳಮ್ಮ ವೃತ್ತದಲ್ಲಿ ಬಿರುವಹಳ್ಳಿ ಗ್ರಾ.ಪಂ ವ್ಯಾಪ್ತಿಯ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ನಡೆಸಿದ ಪ್ರತಿಭಟನೆ ಯಲ್ಲಿ ಭಾಗವಹಿಸಿ ಮಾತನಾಡಿದರು.

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕುಟುಂಬಕ್ಕೆ ಕೆಟ್ಟ ಹೆಸರು ತರಲು ಡಿಕೆಶಿ ಮತ್ತು ಶಿವರಾಮೇಗೌಡ ಸಂಚು ರೂಪಿಸಿರು ವವರ ವಿರುದ್ಧ ಕೂಡಲೇ ಎಸ್‌ಐಟಿ ಕೇಸ್ ದಾಖಲಿಸಿ ವಿಚಾರಣೆ ನಡೆಸಬೇಕು, ಉಪ ಮುಖ್ಯಮಂತ್ರಿ ಹುದ್ದೆಯಿಂದ ಡಿಕೆಶಿಯನ್ನು ವಜಾ ಮಾಡಬೇಕು ಎಂದು ಒತ್ತಾಯಿಸಿದರು.

ಡಿ.ಕೆ.ಶಿವಕುಮಾರ್ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಕನ್ನಡ ನಾಡಿನ ಏಕೈಕ ಮಾಜಿ ಪ್ರಧಾನಿಗಳಾದ ದೇವೇಗೌಡರ ಕುಟುಂಬದ ವಿರುದ್ಧ ಹಗೆತನ ಸಾಧಿಸುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸೋಲಿನ ಭಯದಿಂದ ಅವರು ಇದನ್ನೆಲ್ಲಾ ಮಾಡುತ್ತಿದ್ದಾರೆ, ತಮ್ಮ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಅವರನ್ನು ಮುಖ್ಯಮಂತ್ರಿಗಳು ತಕ್ಷಣವೇ ಸಂಪುಟದಿಂದ ವಜಾ ಮಾಡಬೇಕು.ಜವಾಬ್ದಾರಿಯುತ ಉಪ ಮುಖ್ಯಮಂತ್ರಿ ಸ್ಥಾನದಲ್ಲಿದ್ದರೂ ಅದರ ಮಹತ್ವ ಅರಿಯದೇ ಅವರು ಅಶ್ಲೀಲ ಪೆನ್ ಡ್ರೈವ್ ಗಳ ಹಂಚಿಕೆಯಲ್ಲಿ ಶಾಮೀಲಾಗಿದ್ದಾರೆ. ಶಿವರಾಮೇಗೌಡ, ದೇವರಾಜೇಗೌಡ ನಡುವಿನ ಮೊಬೈಲ್ ಸಂಭಾಷಣೆ ಇದನ್ನು ಬಹಿರಂಗ ಮಾಡಿದೆ. ಕೂಡಲೇ ತನಿಖಾ ತಂಡ ಇವರಿಬ್ಬರಿಗೂ ಸಮನ್ಸ್ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಮುಖಂಡ ಗ್ರಾ.ಪಂ ಸದಸ್ಯ ಕುಮಾರ್ ಮಾತನಾಡಿ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಬಗ್ಗೆ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅವರ ಕುಟುಂಬದ ಬಗ್ಗೆ ಅವಹೇಳನಕಾರಿ ಯಾಗಿ ಮಾತನಾಡಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರದ್ದೋ ಸಮಾಧಿಯ ಮೇಲೆ ರಾಜಕಾರಣ ಮಾಡಲು ಹೊರಟಿರುವ ಎಲ್.ಆರ್. ಶಿವರಾಮೇಗೌಡ ಅವರಿಗೆ ಶೋಭೆ ತರುವುದಿಲ್ಲ. ಎಚ್.ಡಿ. ದೇವೇಗೌಡ ಅವರು ಪ್ರಧಾನಮಂತ್ರಿಯಾಗಿ, ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಹಾಗೂ ಹಲವು ಜನರಿಗೆ ರಾಜಕೀಯ ಜನ್ಮ ನೀಡಿರುವ ಎಚ್.ಡಿ. ದೇವೇಗೌಡ ಅವರ ಸಾವನ್ನು ಬಯಸಿರುವುದು ಹೇಯ ಕೃತ್ಯ ಎಂದು ಶಿವರಾಮೇಗೌಡ ಅವರ ನಡೆಯನ್ನು ಖಂಡಿಸಿದರು.

ಬಳಿಕ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಡಿಸಿಎಂ ಡಿ.ಕೆ ಶಿವಕುಮಾರ್, ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ಪ್ರತಿಕೃತಿಯನ್ನು ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ತಾ.ಪಂ ಮಾಜಿ ಅಧ್ಯಕ್ಷ ಕೃಷ್ಣೇಗೌಡ,ಅಕ್ಕಿಹೆಬ್ಬಾಳು ಹೋಬಳಿಯ ಜೆಡಿಎಸ್ ಅಧ್ಯಕ್ಷ ಬಸವಲಿಂಗಪ್ಪ, ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಈರೇಗೌಡ, ಬಿಜೆಪಿ ಮುಖಂಡ ಮಲ್ಲೇಶ್, ವಿ.ಎಸ್.ಎಸ್. ಎನ್ ಮಾಜಿ ಅಧ್ಯಕ್ಷ ಲಕ್ಷ್ಮೇಗೌಡ, ಮುಖಂಡ ಹರೀಶ್, ಶಿವು, ರುದ್ರೇಶ್, ಪರಶುರಾಮ್, ರಾಮೇಗೌಡ, ಬೇಕರಿ ನಂದನ್, ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಸೇರಿದಂತೆ ಉಪಸ್ಥಿತರು ಭಾಗವಹಿಸಿದರು.

(✍️ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ ಆರ್ ಪೇಟೆ)

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು