ವಿಜಯ ಸಂಘರ್ಷ
ಭದ್ರಾವತಿ: ಬಿಜೆಪಿ ಮತ್ತು ಜೆಡಿಎಸ್ ಜೊತೆಗೂಡಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪಾದಯಾತ್ರೆ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ. ಭ್ರಷ್ಟಾಚಾರದ
ಕುರಿತು ಮಾತನಾಡುವ ನೈತಿಕ ಹಕ್ಕು ಎರಡೂ ಪಕ್ಷಗಳ ಮುಖಂಡರಿಗೆ ಇಲ್ಲ ಎಂದು ನಗರಸಭಾ ಮಾಜಿ ಸದಸ್ಯ ಫ್ರಾನ್ಸಿಸ್ ಹೇಳಿದ್ದಾರೆ.
ರಾಜ್ಯದಲ್ಲಿ ಸದ್ಯ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಸಮರ್ಥ ವಿರೋಧ ಪಕ್ಷವಾಗಿ ಅದರ ಕಡೆಗೆ ಗಮನ ಹರಿಸದೆ ತಮ್ಮ ಜವಾಬ್ದಾರಿಯನ್ನು ಮರೆತಿದ್ದಾರೆ ಎಂದು
ಆರೋಪಿಸಿದರು.
ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ನಡೆಸುತ್ತಿರುವ ಬೆಂಗಳೂರಿನಿಂದ ಮೈಸೂರು ವರೆಗೆ ಪಾದಯಾತ್ರೆಗೆ ಸ್ವಲ್ಪವು ಗೌರವ ಇಲ್ಲ. ಬಿಜೆಪಿ ಮತ್ತು ಜೆಡಿಎಸ್ ಅಧಿಕಾರದ ಅವಧಿಯಲ್ಲಿ ಭ್ರಷ್ಟಾಚಾರವೆ ನಡೆದಿಲ್ಲವೇ? ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ್ ಅವರು ತಮ್ಮ ಪಕ್ಷದ ಮುಖಂಡರ ಭ್ರಷ್ಟಾಚಾರದ ಕುರಿತು ಈಗಾಗಲೇ ಹೇಳಿಕೆ ನೀಡಿರುವುದು ಇಡೀ ನಾಡಿಗೆ ಗೊತ್ತಿದೆ ಎಂದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುದ್ಧ ಹಸ್ತರು. ಅವರು ಕಾನೂನಿನ ಪರಿಮಿತಿ ಯೊಳಗೆ ನಡೆದುಕೊಂಡಿದ್ದಾರೆ. ಹೀಗಾಗಿ ಬಿಜೆಪಿ ಮತ್ತು ಜೆಡಿಎಸ್‌ನವರು ಮಾಡುತ್ತಿರುವ ಪಾದಯಾತ್ರೆ ಜನರ ದಿಕ್ಕು ತಪ್ಪಿಸುವ ಕೆಲಸವಾಗಿದೆ. ಸಿದ್ದರಾಮಯ್ಯ ಅವರನ್ನು ಯಾರಿಂದಲೂ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.