ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಭಾಗದಲ್ಲಿ ಕಾಡಾನೆಗಳ ಹಾವಳಿ ನಿಯಂತ್ರಿಸಲು, ಭದ್ರಾ ಅಭಯಾರಣ್ಯದಲ್ಲಿ ಆನೆ ಶಿಬಿರ ಸ್ಥಾಪಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಘೋಷಿಸಿದ್ದಾರೆ.
ಅವರು ಶುಕ್ರವಾರ ಕುವೆಂಪು ವಿಶ್ವವಿದ್ಯಾ ಲಯದ ಸಭಾಂಗಣದಲ್ಲಿ ನಡೆದ, ಭದ್ರಾ ಹುಲಿ ಸಂರಕ್ಷಿತ ಪ್ರದೇಶ ರಜತ ಮಹೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ರಾಜ್ಯದಲ್ಲಿ ವನ್ಯಜೀವಿ ಮತ್ತು ಮಾನವ ಸಂಘರ್ಷ ಹೆಚ್ಚಾಗುತ್ತಿದ್ದು, ಆನೆಗಳಿಂದ ಹೆಚ್ಚಿನ ಜೀವಹಾನಿ ಮತ್ತು ಬೆಳೆಹಾನಿ ಸಂಭವಿಸುತ್ತಿದೆ. ಇದನ್ನು ನಿಯಂತ್ರಿಸಲು 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಆನೆ ವಿಹಾರ ಧಾಮ ಅಂದರೆ ಎಲಿಫೆಂಟ್ ಸಾಫ್ಟ್ ರಿಲೀಸ್ ಸೆಂಟರ್ ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಸುವಂತೆ ವನ್ಯಜೀವಿ ಪರಿಪಾಲಕರಿಗೆ ಸೂಚನೆ ನೀಡಿರುವುದಾಗಿ ಹೇಳಿದರು.
ಈ ಆನೆ ವಿಹಾರ ಧಾಮದ ಸುಮಾರು 5 ಸಾವಿರ ಎಕರೆ ಪ್ರದೇಶದಲ್ಲಿ ಆನೆಗಳಿಗೆ ಇಷ್ಟವಾದ ಬಿದಿರು, ಹಲಸು, ಹುಲ್ಲು ಇತ್ಯಾದಿ ಬೆಳೆಸಲಾಗುವುದು. ಸುತ್ತಲೂ ಬ್ಯಾರಿಕೇಡ್ ಅಳವಡಿಸಿ ಸೆರೆ ಹಿಡಿದ ಆನೆಗಳನ್ನು ಇಲ್ಲಿ ತಂದು ಬಿಡಲಾಗುವುದು. ಇದರಿಂದ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಾಡಿನ ಹೊರಗೆ ಇರುವ ಆನೆಗಳಿಂದ ಜನರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ಸಾಧ್ಯವಾಗುತ್ತದೆ ಎಂದು ವಿವರಿಸಿದರು.
ಭದ್ರಾ ಹುಲಿ ಅಭಯಾರಣ್ಯ ಒಂದು ಸಾವಿರ ಚದರ ಕಿಲೋ ಮೀಟರ್ ವ್ಯಾಪ್ತಿಯ ವಿಶಾಲ ವಾದ ಸುಭದ್ರ ಅರಣ್ಯವಾಗಿದೆ. ಇದು ವಿಶ್ವ ಪಾರಂಪರಿಕ ತಾಣವಾದ ಪಶ್ಚಿಮ ಘಟ್ಟಗಳ ಶ್ರೀಮಂತ ಅರಣ್ಯ ಸಂಪತ್ತನ್ನು ಒಳಗೊಂಡಿದೆ. ಕರ್ನಾಟಕ ಹುಲಿ ಸಂಖ್ಯೆಯಲ್ಲಿ ದೇಶದಲ್ಲೇ 2 ನೇ ಸ್ಥಾನದಲ್ಲಿದೆ.
ರಾಜ್ಯದಲ್ಲಿ ಸುಮಾರು 563 ಹುಲಿಗಳಿವೆ. ಅಳಿವಿನಂಚಿನಲ್ಲಿರುವ ಹುಲಿಗಳನ್ನು ಸಂರಕ್ಷಿಸಲು ಅಂದಿನ ಪ್ರಧಾನಿ ಇಂದಿರಾ ಗಾಂಧೀ ಅವರು 1973 ರಲ್ಲಿ ಆರಂಭಿಸಿದ ಹುಲಿ ಯೋಜನೆಗೆ 50 ವರ್ಷ ತುಂಬಿರು ವುದೂ ಮತ್ತೊಂದು ಸಂತೋಷದಾಯಕ ವಿಚಾರವಾಗಿದೆ ಎಂದರು.
ಭದ್ರಾ ಹುಲಿ ಸಂರಕ್ಷಿತ ಪ್ರದೇಶವು ನಿಸರ್ಗ ದತ್ತವಾದ ರಮಣೀಯ ಭೂಪ್ರದೇಶವನ್ನು ಒಳಗೊಂಡಿದೆ. ಇಲ್ಲಿ ವರ್ಷದ 365 ದಿನವೂ ನದಿ, ತೊರೆ, ಹಳ್ಳಗಳು ಹರಿಯುತ್ತಲೇ ಇರುತ್ತವೆ. ಜಲ ಸಮೃದ್ಧಿ, ಸಸ್ಯ ಸಂಕುಲ, ಪ್ರಾಣಿ ಸಂಕುಲ, ಕೀಟ ಸಂಕುಲ ಇರುವ ಈ ಪ್ರದೇಶ ಅತ್ಯಮೂಲ್ಯ ಜೀವವೈಧ್ಯತೆಯಿಂದ ಕೂಡಿದ್ದು, ನೂರಾರು ಪ್ರಬೇಧದ ವನ್ಯಜೀವಿ ಗಳಿಗೆ ನೆಲೆಯಾಗಿದೆ.
ಈ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹಿಂದೆ 16 ಗ್ರಾಮಗಳ 736 ಕುಟುಂಬಗಳು ವಾಸವಿದ್ದು, ಆ ಕುಟುಂಬಗಳು ಸ್ವ ಇಚ್ಛೆಯಿಂದ ಭದ್ರಾ ಪುನರ್ವಸತಿ ಯೋಜನೆಯಡಿಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕೆಳಗೂರು ಹಾಗೂ ಮಳಲಿ ಚನ್ನೇನಹಳ್ಳಿ ಗ್ರಾಮಗಳಿಗೆ ಸ್ಥಳಾಂತರಗೊಂಡಿರುತ್ತಾರೆ.
ಇದೊಂದು ಭಾರತದಲ್ಲಿಯೇ ಅತ್ಯಂತ ಯಶಸ್ವಿ ಪುನರ್ವಸತಿ ಯೋಜನೆಯಾಗಿದ್ದು, ಹುಲಿ ಸಂರಕ್ಷಣೆಯಲ್ಲಿ ಜನರ ಸಹಭಾಗಿತ್ವದ ಪ್ರಾಮುಖ್ಯತೆಯನ್ನು ತೋರಿಸುತ್ತದೆ. ಇದೇ ಪ್ರಕಾರವಾಗಿ ರಾಜ್ಯದ ಇತರ ಅರಣ್ಯ ಪ್ರದೇಶದ ಒಳಗೆ ವಾಸಿಸುತ್ತಿರುವವರ ಮನವೊಲಿಸಿ ಅವರೆಲ್ಲರಿಗೂ ಪುನರ್ವಸತಿ ಕಲ್ಪಿಸಲು ರಾಜ್ಯ ಸರ್ಕಾರ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.
ಭದ್ರಾ ಅರಣ್ಯವಾಸಿಗಳ ಪುನರ್ವಸತಿಯಾದ ನಂತರದಲ್ಲಿ ಮಾನವ ವನ್ಯಜೀವಿ ಸಂಘರ್ಷ ಗಣನೀಯವಾಗಿ ಕಡಿಮೆಯಾಗಿದ್ದು, ಆರಂಭದಲ್ಲಿ 8 ಹುಲಿಗಳನ್ನು ಹೊಂದಿದ್ದ ಈ ಸಂರಕ್ಷಿತ ಪ್ರದೇಶದಲ್ಲಿ ಪ್ರಸ್ತುತ 40 ಹುಲಿ ಗಳಿವೆ. ಇದಕ್ಕೆ ಕಾರಣ ಹುಲಿಗಳ ಆವಾಸಸ್ಥಾನದ ಸಂರಕ್ಷಣೆಯೇ ಆಗಿದೆ. ಇಲ್ಲಿ ದಟ್ಟವಾದ ಕಾನನವಿದ್ದು, ಸುಮಾರು 400 ಕ್ಕೂ ಅಧಿಕ ಆನೆಗಳಿವೆ ಎಂದು ಎಂದರು.
ಇದೇ ಸಂದರ್ಭದಲ್ಲಿ ಸಚಿವರು ಭದ್ರಾ ರಜತ ಮಹೋತ್ಸವ ಸ್ಮರಣಾರ್ಥ ಅಂಚೆ ಚೀಟಿ, ಅಂತರ್ಜಾಲ ತಾಣ ಮತ್ತು ಕಿರು ಹೊತ್ತಗೆ ಗಳನ್ನು ಬಿಡುಗಡೆ ಮಾಡಿದರು.