ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಚುನಾವಣಾ ಪ್ರಕ್ರಿಯೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವಿರಬೇಕು ತಮ್ಮ ಅಮೂಲ್ಯವಾದ ಮತದಾನದ ಹಕ್ಕಿನಿಂದ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು ಮತ್ತು ಶಿಕ್ಷಣದ ಜೊತೆಗೆ ಪತ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಬೇಕು. ಯುವಶಕ್ತಿ ದೇಶದ ಆಸ್ತಿ ಮತ್ತು ಶಕ್ತಿ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕ ಚಂದ್ರಪ್ಪ ಗುಂಡಪಲ್ಲಿ ಹೇಳಿದರು.
ಎಂಪಿಎಂಇಎಸ್ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ, ಚುನಾವಣಾ ಆಡಳಿತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ತಾಲ್ಲೂಕು ಮಟ್ಟದ ELC ಸ್ಪರ್ಧೆಗಳು ಮತ್ತು ಮತ ದಾನದ ಮಹತ್ವದ ಬಗ್ಗೆ ಜಾಗೃತಿ ಕಾರ್ಯಕ್ರಮ ದಲ್ಲಿ ಅವರು ಮಾತನಾಡಿದರು.
ನಗರಸಭಾ ಪೌರಾಯುಕ್ತ ಪ್ರಕಾಶ್ ಎಂ ಚನ್ನಪ್ಪನವರ್ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿ ಚುನಾವಣಾ ಸಮಯದಲ್ಲಿ ಯಾವುದೇ ಆಮಿಷಗಳಿಗೆ ಒಳಗಾಗದೆ ಪ್ರಾಮಾಣಿಕವಾಗಿ ಸಮಾಜಮುಖಿಯಾಗಿ ಕೆಲಸ ಮಾಡುವಂತಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು ಎಂದು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು.
ಎಂ.ಪಿ.ಎಂ.ಇ.ಎಸ್ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಲಕ್ಷ್ಮೀಕಾಂತ.ಜಿ.ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಒಬ್ಬ ರೋಗಿಯ ಜೀವ ಉಳಿಸಲು ರಕ್ತದಾನ, ಹಸಿವು ನೀಗಿಸಲು ಅನ್ನದಾನ, ಸಮಾಜದ ಉಜ್ವಲ ಭವಿಷ್ಯಕ್ಕೆ ವಿದ್ಯಾದಾನ ಎಷ್ಟು ಮುಖ್ಯವೋ ರಾಜಕೀಯ ಕ್ಷೇತ್ರದಲ್ಲಿ ಮತದಾನವು ಕೂಡ ಅಷ್ಟೇ ಮುಖ್ಯ. ಮತದಾನವು ದೇಶದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ. ಹಾಗಾಗಿ ನೀವೆಲ್ಲರೂ ಮುಂದಿನ ದಿನಗಳಲ್ಲಿ ಮತದಾನ ಮಾಡುವ ಮೂಲಕ ದೇಶದ ಅಭಿವೃದ್ಧಿಯಲ್ಲಿ ಪಾಲ್ಗೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಬಿ.ಇ.ಒ ನಾಗೇಂದ್ರಪ್ಪ, ಜಿಲ್ಲಾ ELC ಸಂಯೋಜಕ ನವೀದ್ ಅಹ್ಮದ್ ಪರ್ವಿಜ್ ಸೇರಿದಂತೆ ವಿವಿಧ ಕಾಲೇಜುಗಳ ಪ್ರಾಂಶುಪಾಲರುಗಳಾದ ಕುಟ್ರಿ, ಸಿದ್ದಲಿಂಗ ಮೂರ್ತಿ, ಶಶಿಕುಮಾರ್ ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ಇತರೆ ಕಾಲೇಜುಗಳ ಪ್ರಾಂಶುಪಾಲರು ಮತ್ತು ELC ಸಂಯೋಜನಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.