ಬನ್ನಿ ಮುಡಿಯುವ ಮೂಲಕ ರಾವಣ ಸಂಹಾರದೊಂದಿಗೆ ನಾಡಹಬ್ಬಕ್ಕೆ ತೆರೆ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ : ನಗರಸಭೆ ವತಿಯಿಂದ ಈ ಬಾರಿ ಸಹ 11 ದಿನಗಳ ಕಾಲ ಹಮ್ಮಿಕೊಳ್ಳಲಾಗಿದ್ದ ನಾಡಹಬ್ಬ ದಸರಾ ಆಚರಣೆ ತಾಲೂಕು ದಂಡಾಧಿಕಾರಿ ತಹಸೀಲ್ದಾರ್ ರವರು ಬನ್ನಿ ಮುಡಿಯುವ ಮೂಲಕ, ರಾವಣ ಸಂಹಾರದೊಂದಿಗೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ.

    ನಾಡಹಬ್ಬ ದಸರಾ ಆಚರಣೆ ಹಿನ್ನಲೆ ಯಲ್ಲಿ ಹಳೇನಗರದ ಕನಕ ಮಂಟಪ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಬನ್ನಿ ಮುಡಿಯುವ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಪಾಲ್ಗೊಂಡು ತಾಯಿ ಚಾಮುಂಡೇಶ್ವರಿ ಕ್ಷೇತ್ರದ ಜನತೆ ಒಳಿತು ಮಾಡಲಿ ಎಂದು ಪ್ರಾರ್ಥಿಸಿದರು.

    ನಗರಸಭೆ ಅಧ್ಯಕ್ಷೆ ಜೆ.ಸಿ.ಗೀತಾರಾಜ ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷೆ ಕೆ.ಪಿ ಪ್ರೇಮಾ ಬದರಿನಾರಾಯಣ, ಸದಸ್ಯ ಬಿ.ಕೆ ಮೋಹನ್,ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ ಬಿ.ಎಸ್ ಗಣೇಶ್, ನಗರಸಭೆ ಪೌರಾಯುಕ್ತ ಕೆ.ಎನ್.ಹೇಮಂತ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ.ಸಿದ್ದಬಸಪ್ಪ, ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    
      ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ ವೇದಬ್ರಹ್ಮ ಶ್ರೀ ರಂಗನಾಥ ಶರ್ಮರವರ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು.

    ತಾಲೂಕು ದಂಡಾಧಿಕಾರಿ ತಹಸೀಲ್ದಾರ್ ಪ್ರದೀಪ್ ದೇವಗಿರಿ ಧಾರ್ಮಿಕ ಆಚರಣೆಗಳ ಅಂತಿಮ ಹಂತದಲ್ಲಿ ಬನ್ನಿಮುಡಿಯುವ ಮೂಲಕ ಆಚರಣೆಗೆ ತೆರೆ ಎಳೆದರು. ಕೊನೆಯಲ್ಲಿ ಯುವ ಕಲಾವಿದ, ಜಿ.ಎಂ ಆಟ್ಸ್ ಜಿ. ರಂಜಿತ್ ನಿರ್ಮಾಣಗೊಳಿಸಿದ್ದ ರಾವಣನ ಕಲಾಕೃತಿ ಸಿಡಿಮದ್ದುಗಳ ಮೂಲಕ ಸಂಹಾರಗೊಳಿಸಲಾಯಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು